LATEST NEWS
ಆ ಮನುಷ್ಯ ಒಂದು ರೀತಿ ಸೈಕೋ ಇದ್ದಾಗೆ ಇದ್ದಾನೆ ಸೈಕೋ ಕಿಲ್ಲರ್ ರೀತಿ ಬಂದು ಕೊಲೆ ಮಾಡಿದ್ದಾನೆ – ಲಕ್ಷ್ಮೀ ಹೆಬ್ಬಾಳಕರ್
ಉಡುಪಿ ನವೆಂಬರ್ 17: ಕೊಲೆ ಮಾಡಿದ ಆರೋಪಿಯನ್ನು ನೋಡಿದರೆ ಸೈಕೋ ಕಿಲ್ಲರ ರೀತಿ ಇದ್ದಾನೆ. ಸೈಕೋ ರೀತಿ ಬಂದು ನಾಲ್ವರನ್ನು ಕೊಲೆ ಮಾಡಿ ಹೋಗಿದ್ದಾನೆ. ಉಡುಪಿ ಜಿಲ್ಲೆಯ ಶಾಂತಿ ಪ್ರಿಯವಾಗಿರುವ ಜಿಲ್ಲೆ ಆಗಿದ್ದು, ಇಂತಹ ಜಿಲ್ಲೆಯಲ್ಲಿ ಈ ರೀತಿಯ ಘಟನೆ ನಡೆಯಬಾರದಿತ್ತು. ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದ್ದು ಎಲ್ಲ ರೀತಿಯಲ್ಲೂ ಕಾನೂನು ಸುವ್ಯವಸ್ಥೆ ಕಾಪಾಡಲಾಗುವುದು ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದಾರೆ.
ನಾಲ್ವರ ಕೊಲೆ ನಡೆದ ನೇಜಾರಿನ ಮನೆಗೆ ಭೇಟಿ ನೀಡಿ ಮೃತ ಹಸೀನಾರ ಪತಿ ನೂರ್ ಮುಹಮ್ಮದ್ ಹಾಗೂ ಅವರ ಮಗ ಆಸಾದ್ ಹಾಗೂ ಕುಟುಂಬದ ಇತರ ಸದಸ್ಯರಿಗೆ ಸಾಂತ್ವನ ಹೇಳಿದರು. ಮಾಧ್ಯಮದವರೊಂದಿಗೆ ಮಾತನಾಡಿದ ಸಚಿವರು, ಒಂದೇ ಕುಟುಂಬದ ನಾಲ್ವರನ್ನು ಅಮಾನುಷವಾಗಿ ಕೊಂದ ವ್ಯಕ್ತಿ ರಾಕ್ಷಸ ಕೃತ್ಯ ಎಸಗಿದ್ದಾನೆ.
ಮೃತರ ಕುಟುಂಬದ ಜೊತೆ ಸರಕಾರ ಇದ್ದು, ಮನೆಗೆ ಭೇಟಿ ನೀಡಿ ಸಾಂತ್ವನ ಹೇಳಿದ್ದೇನೆ. ಆರೋಪಿಯನ್ನು ತ್ವರಿತವಾಗಿ ಬಂಧಿಸುವ ಮೂಲಕ ಪೊಲೀಸ್ ಇಲಾಖೆ ಒಳ್ಳೆಯ ಕೆಲಸ ಮಾಡಿದೆ. ಆದಷ್ಟು ಬೇಗ ನ್ಯಾಯ ದೊರಕಿಸಲು ಪ್ರಯತ್ನ ಮಾಡುತ್ತೇವೆ ಎಂದರು.
ಸಿಸಿಟಿವಿ ಅಳವಡಿಕೆ ಸೇರಿದಂತೆ ಭದ್ರತೆಗೆ ಬೇಕಾದ ಎಲ್ಲ ರೀತಿಯ ವ್ಯವಸ್ಥೆ ಮಾಡುವ ಬಗ್ಗೆ ಜಿಲ್ಲಾಧಿಕಾರಿ ಮತ್ತು ಎಸ್ಪಿ ಜೊತೆ ಮಾತನಾಡುತ್ತೇನೆ ಎಂದು ಅವರು ತಿಳಿಸಿದರು. ಈ ಪ್ರಕರಣವನ್ನು ತ್ವರಿತ ನ್ಯಾಯಾಲಯದ ಮೂಲಕ ವಿಚಾರಣೆ ನಡೆಸಬೇಕು ಮತ್ತು ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ನೇಮಕ ಮಾಡಬೇಕೆಂದು ಕುಟುಂಬಸ್ಥರು ಒತ್ತಾಯಿಸಿದ್ದಾರೆ. ಕಾನೂನು ಚೌಕಟ್ಟಿನಲ್ಲಿ ಸರಕಾರದಿಂದ ಯಾವುದೇ ಕ್ರಮ ತೆಗೆದುಕೊಳ್ಳಲು ಸಾಧ್ಯವಿದೆಯೋ ಅದನ್ನು ಮಾಡಲಾಗುವುದು ಎಂದು ಅವರು ಹೇಳಿದರು.