ಟೆಹ್ರಾನ್, ಮಾರ್ಚ್ 22: ಜಾಗತಿಕ ತೈಲ ಮತ್ತು ಅನಿಲ ಪೂರೈಕೆಯ ಜೀವನಾಡಿಯಾಗಿರುವ ಹಾರ್ಮುಜ್ ಜಲಸಂಧಿಯನ್ನು ಇರಾನ್ ಮುಚ್ಚಿರುವುದನ್ನು ವಿರೋಧಿಸಿ, ಅಮೆರಿಕ ಹಾಗೂ ಯುಎಇ ಸೇರಿದಂತೆ 20ಕ್ಕೂ ಹೆಚ್ಚು ಪ್ರಮುಖ ರಾಷ್ಟ್ರಗಳು ಇರಾನ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿವೆ. ಈ ಆಯಕಟ್ಟಿನ ಪ್ರದೇಶದಲ್ಲಿ ವಾಣಿಜ್ಯ ಹಡಗುಗಳ ಸುರಕ್ಷಿತ ಸಂಚಾರವನ್ನು ಖಚಿತಪಡಿಸಲು ಜಂಟಿ ಹೋರಾಟ ನಡೆಸುವುದಾಗಿ ಈ ಒಕ್ಕೂಟವು ಪ್ರತಿಜ್ಞೆ ಮಾಡಿದೆ.

ವಿಶ್ವದ ಒಟ್ಟು ತೈಲ ಮತ್ತು ನೈಸರ್ಗಿಕ ಅನಿಲ ಪೂರೈಕೆಯ ಐದನೇ ಒಂದು ಭಾಗವು ಹಾರ್ಮುಜ್ ಜಲಸಂಧಿಯ ಮೂಲಕವೇ ಸಾಗಣೆಯಾಗುತ್ತದೆ. ಇಂತಹ ಪ್ರಮುಖ ಜಲಮಾರ್ಗವನ್ನು ಇರಾನ್ ಏಕಪಕ್ಷೀಯವಾಗಿ ಮುಚ್ಚಿರುವುದು ಜಾಗತಿಕ ಆರ್ಥಿಕತೆಯ ಮೇಲೆ ಭೀಕರ ಪರಿಣಾಮ ಬೀರಲಿದೆ ಎಂದು 22 ರಾಷ್ಟ್ರಗಳ ಒಕ್ಕೂಟವು ಬಿಡುಗಡೆ ಮಾಡಿದ ಜಂಟಿ ಹೇಳಿಕೆಯಲ್ಲಿ ಆತಂಕ ವ್ಯಕ್ತಪಡಿಸಿದೆ.
ಕಳೆದ 22 ದಿನಗಳಿಂದ ಸಂಘರ್ಷ ತೀವ್ರಗೊಳ್ಳುತ್ತಿದ್ದು, ಪರ್ಷಿಯನ್ ಕೊಲ್ಲಿಯಲ್ಲಿ ನಿರಾಯುಧ ವಾಣಿಜ್ಯ ಹಡಗುಗಳ ಮೇಲೆ ಇರಾನ್ ನಡೆಸುತ್ತಿರುವ ದಾಳಿಗಳನ್ನು ಯುಎಇ ಮತ್ತು ಬಹ್ರೇನ್ ಕಟುವಾದ ಪದಗಳಲ್ಲಿ ಖಂಡಿಸಿವೆ. ತೈಲ ಸ್ಥಾವರಗಳು ಹಾಗೂ ನಾಗರಿಕ ಮೂಲಸೌಕರ್ಯಗಳನ್ನು ಗುರಿಯಾಗಿಸಿಕೊಂಡು ನಡೆಸುತ್ತಿರುವ ದಾಳಿಗಳು ಅಂತಾರಾಷ್ಟ್ರೀಯ ಕಾನೂನುಗಳ ಉಲ್ಲಂಘನೆಯಾಗಿದೆ ಎಂದು ಒಕ್ಕೂಟವು ಘೋಷಿಸಿದೆ. “ಜಲಸಂಧಿಯ ಮೂಲಕ ಸುರಕ್ಷಿತ ಸಾಗಣೆಯನ್ನು ಖಚಿತಪಡಿಸಿಕೊಳ್ಳಲು ನಾವು ಎಲ್ಲಾ ರೀತಿಯ ಸೂಕ್ತ ಪ್ರಯತ್ನಗಳಿಗೆ ಬೆಂಬಲ ನೀಡಲಿದ್ದೇವೆ,” ಎಂದು ಜಂಟಿ ಹೇಳಿಕೆಯಲ್ಲಿ ತಿಳಿಸಲಾಗಿದೆ.
ಫೆಬ್ರವರಿ 28 ರಂದು ಅಮೆರಿಕ ಮತ್ತು ಇಸ್ರೇಲ್ ಪಡೆಗಳು ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿಯ ನಂತರ ಮಧ್ಯಪ್ರಾಚ್ಯದಲ್ಲಿ ಅಸ್ಥಿರತೆ ಉಂಟಾಗಿದೆ. ಇದಕ್ಕೆ ಪ್ರತೀಕಾರವಾಗಿ ಟೆಹ್ರಾನ್ ತನ್ನ ನೆರೆಹೊರೆಯ ಗಲ್ಫ್ ರಾಷ್ಟ್ರಗಳ ಮೇಲೆ ಹಾಗೂ ಜಲಸಂಧಿಯ ಮೂಲಕ ಸಾಗುವ ವಿದೇಶಿ ಹಡಗುಗಳ ಮೇಲೆ ನಿರಂತರ ದಾಳಿಗಳನ್ನು ನಡೆಸುತ್ತಿದ್ದು, ಇದು ಯುದ್ಧದ ಭೀತಿಯನ್ನು ಮತ್ತಷ್ಟು ಹೆಚ್ಚಿಸಿದೆ.