UDUPI
ಬೆಸಿಗೆಯಲ್ಲಿ ಕುಡಿಯುವ ನೀರು ಪೂರೈಕೆ ಸಮರ್ಪಕವಾಗಿರಲಿ: ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ
ಉಡುಪಿ, ಏಪ್ರಿಲ್ 11 : ಸಾರ್ವಜನಿಕರಿಗೆ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಎಲ್ಲಾ ಅಗತ್ಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು, ಸಮರ್ಪಕ ನೀರಿನ ವ್ಯವಸ್ಥೆ ಮಾಡುವಂತೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಸೂಚನೆ ನೀಡಿದರು.
ಕುಂದಾಪುರ ತಾಲೂಕು ಪಂಚಾಯತ್ ಸಭಾಂಗಣದಲ್ಲಿ, ಕುಂದಾಪುರ ಮತ್ತು ಬೈಂದೂರು ವ್ಯಾಪ್ತಿಯಲ್ಲಿ ಕುಡಿಯುವ ನೀರು ಪೂರೈಕೆ ಕುರಿತಂತೆ ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಗ್ರಾಮ ಪಂಚಾಯತ್ ಗಳ ವ್ಯಾಪ್ತಿಯಲ್ಲಿ ಲಭ್ಯವಿರುವ ನೀರಿನ ಲಭ್ಯತೆ, ಟ್ಯಾಂಕರ್ ಮೂಲಕ ನೀರು ನೀಡಲು ಅಗತ್ಯವಿರುವ ಕುಟುಂಬಗಳ ಸಂಖ್ಯೆಯನ್ನು ನಿಖರವಾಗಿ ತಿಳಿದುಕೊಂಡು, ಪಿಡಿಓ ಗಳು ಹಾಗೂ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನಿಯರ್ ಗಳನ್ನು ಗ್ರಾಮ ಪಂಚಾಯತ್‌ವಾರು ಅಗತ್ಯ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳು ನಿರ್ದೇಶನ ನೀಡಿದರು.
ಪ್ರಸಕ್ತ ಸಾಲಿನಲ್ಲಿ ಇದುವರೆಗೂ ಮಳೆಯಾಗದಿರುವ ಕಾರಣ ಮುಂದಿನ ಎರಡು ತಿಂಗಳುಗಳನ್ನು ಗಮನದಲ್ಲಿಟ್ಟುಕೊಂಡು, ನೀರಿನ ಸಮರ್ಪಕ ಪೂರೈಕೆಗೆ, ಲಭ್ಯವಿರುವ ನೀರಿನ ಮೂಲಗಳು ಮತ್ತು ಪರ್ಯಾಯ ಮೂಲಗಳ ಬಗ್ಗೆ ಕ್ರಮವಹಿಸಲು ತಿಳಿಸಿದರು.
ಚುನಾವಣೆ ಸಂದರ್ಭದಲ್ಲಿ ಮತಗಟ್ಟೆಗಳಿಗೆ ಆಗಮಿಸುವ ಸಾರ್ವಜನಿಕರಿಗೆ ಮತ್ತು ಕರ್ತವ್ಯ ನಿರ್ವಹಿಸುವ ಸಿಬ್ಬಂದಿಗಳಿಗೆ ನೀರಿನ ಕೊರತೆಯಾಗದಂತೆ ಅಗತ್ಯ ಮುನ್ನ್ನೆಚ್ಚರಿಕೆ ವಹಿಸುವಂತೆ ಸೂಚನೆ ನೀಡಿದರು.