KARNATAKA
ಹಿಜಬ್ ಹೋರಾಟಗಾರ್ತಿಯರಿಗೆ ಮುಖ ಭಂಗ – ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ ಎಂದ ಹೈಕೋರ್ಟ್

ಬೆಂಗಳೂರು : ರಾಷ್ಟ್ರಮಟ್ಟದಲ್ಲಿ ವಿವಾದ ಎಬ್ಬಿಸಿದ ಹಿಜಬ್ ವಿವಾದಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ತನ್ನ ತೀರ್ಪನ್ನು ನೀಡಿದ್ದು ಹಿಜಬ್ ಧರಿಸುವುದು ಮುಸ್ಲಿಂ ಧರ್ಮದಲ್ಲಿ ಅಗತ್ಯ ಆಚರಣೆ ಅಲ್ಲ ಎಂದಿದ್ದು, ಸರಕಾರದ ಹಿಜಬ್ ನಿರ್ಬಂಧವನ್ನು ಎತ್ತಿ ಹಿಡಿದಿದೆ.
ಉಡುಪಿ ಸರಕಾರಿ ಕಾಲೇಜಿನಲ್ಲಿ ಆರಂಭವಾದ ಹಿಜಬ್ ವಿವಾದ ಇಡೀ ರಾಜ್ಯಕ್ಕೆ ಹಬ್ಬಿತ್ತು. ಈ ವಿವಾದ ನ್ಯಾಯಾಲಯದ ಮೆಟ್ಟಿಲೇರಿದ ಹಿನ್ನಲೆ ಸತತ 11 ದಿನಗಳ ಕಾಲ ವಿಚಾರಣೆ ನಡೆಸಿದ ಹೈಕೋರ್ಟ್ ನ ತ್ರಿಸದಸ್ಯ ಪೀಠ ಇಂದು ತೀರ್ಪು ನೀಡಿದೆ. ಹಿಜಾಬ್ ಧರಿಸುವುದು ಅಗತ್ಯ ಧಾರ್ಮಿಕ ಆಚರಣೆಯಲ್ಲ ಎಂದ ಪೀಠ, ಕಾಲೇಜು ತರಗತಿಗಳಲ್ಲಿ ಹಿಜಾಬ್ ಧರಿಸಲು ಅವಕಾಶ ನೀಡಬೇಕು ಎಂಬ ಸಾರ್ವಜನಿಕ ಹಿತಾಸಕ್ತಿ ಮನವಿಗಳನ್ನು ಹೈಕೋರ್ಟ್ ಸಾರಾಸಗಟಾಗಿ ತಿರಸ್ಕರಿಸಿದೆ.

ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಋತುರಾಜ್ ಅವಸ್ಥಿ, ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಹಾಗೂ ನ್ಯಾಯಮೂರ್ತಿ ಜೈಬುನ್ನೀಸಾ ಮೊಹಿಯುದ್ದೀನ್ ಖಾಜಿ ಅವರನ್ನು ಒಳಗೊಂಡ ವಿಸ್ತೃತ ನ್ಯಾಯಪೀಠದಿಂದ ತೀರ್ಪು ನೀಡಿದೆ.
ಹಿಜಾಬ್ ಅಗತ್ಯ ಧಾರ್ಮಿಕ ಆಚರಣೆ ಅಲ್ಲ. ಅಂತೆಯೇ ಕುರಾನ್ ನಲ್ಲಿ ಹಿಜಾಬ್ ಅವಶ್ಯಕ ಆಚರಣೆ ಎಂಬ ಉಲ್ಲೇಖಕ್ಕೆ ಯಾವುದೇ ಆಧಾರವಿಲ್ಲ” ಎಂದು ನ್ಯಾಯಪೀಠ ಅಭಿಪ್ರಾಯಪಟ್ಟಿದೆ. ವಿಧ್ಯಾರ್ಥಿನಿಯರು ಸಲ್ಲಿಸಿದ್ದ ಎಲ್ಲಾ ಅರ್ಜಿಗಳನ್ನು ವಜಾಗೊಳಿಸಿದೆ.
ಸರ್ಕಾರದ ಆದೇಶ ಕಾನೂನುಬದ್ಧವಾಗಿದೆ, ಸರ್ಕಾರದ ವಸ್ತ್ರಸಂಹಿತೆಯನ್ನು ಪ್ರಶ್ನೆ ಮಾಡುವ ಹಾಗಿಲ್ಲ, ಶಾಲಾ-ಕಾಲೇಜುಗಳಲ್ಲಿ ಹಿಜಾಬ್ ಗೆ ಅವಕಾಶವಿಲ್ಲ ಎಂದು ಸರ್ಕಾರದ ಆದೇಶವನ್ನು ಎತ್ತಿಹಿಡಿದು ತ್ರಿಸದಸ್ಯ ಪೀಠ ಐತಿಹಾಸಿಕ ತೀರ್ಪು ನೀಡಿ ವಿಚಾರಣೆಯನ್ನು ಇಂದು ಮುಕ್ತಾಯಗೊಳಿಸಿದೆ. ಹೈಕೋರ್ಟ್ ನೀಡಿವ ತೀರ್ಪನ್ನು ಪ್ರಶ್ನಿಸಿ ಮುಸ್ಲಿಂ ಸಂಘಟನೆಗಳು ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.