BANTWAL
ಡಾ. ಭಟ್ ವಿರುದ್ಧ ವಿಚಾರಣೆಗೆ ಹೈಕೋರ್ಟ್ ತಡೆ, ಪ್ರಚೋದನಕಾರಿ ಭಾಷಣದ ಆರೋಪ.
ಬಂಟ್ವಾಳ, ಆಗಸ್ಟ್ 23 : ಪ್ರಚೋದನಕಾರಿ ಭಾಷಣ ಮಾಡಿ ಕೋಮು ಗಲಭೆಗೆ ಕಾರಣರಾದ ಆರೋಪದ ಹಿನ್ನೆಲೆಯಲ್ಲಿ ಹಿರಿಯ ಆರ್ ಎಸ್ ಎಸ್ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಅಧೀನ ನ್ಯಾಯಾಲಯದಲ್ಲಿ ನಡೆಯುತ್ತಿರುವ ವಿಚಾರಣೆಗೆ ರಾಜ್ಯ ಉಚ್ಚ ನ್ಯಾಯಾಲಯ ತಡೆಯಾಜ್ಞೆ ನೀಡಿದೆ .
ಪ್ರಕರಣದಲ್ಲಿ ತಮ್ಮ ವಿರುದ್ಧ ಪ್ರಾಸಿಕ್ಯೂಷನ್ ಗೆ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ನೀಡಿದ್ದ ಪೂರ್ವ ಅನುಮತಿ ಮತ್ತು ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯ ನೀಡಿದ್ದ ಸಮನ್ಸ್ ರದ್ದು ಕೋರಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅರವಿಂದ ಕುಮಾರ್ ಅವರಿದ್ದ ಪೀಠ ಮುಂದಿನ ಆದೇಶದವರೆಗೆ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯದ ವಿಚಾರಣೆಗೆ ತಡೆಯಾಜ್ಞೆ ನೀಡಿತು.ಜತೆಗೆ ಅರ್ಜಿಯ ಸಂಬಂಧ ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಅಧೀನ ಕಾರ್ಯದರ್ಶಿ ಮತ್ತು ಬಂಟ್ವಾಳ ನಗರ ಠಾಣಾಧಿಕಾರಿಗಳಿಗೆ ನೋಟಿಸ್ ಜಾರಿಗೊಳಿಸಿ ವಿಚಾರಣೆ ಮುಂದೂಡಿತು . 2014 ಫೆಬ್ರವರಿ 26 ರಂದು ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯಲ್ಲಿ ಹಿಂದೂ ಹಿತರಕ್ಷಣಾ ವೇದಿಕೆ ಆಯೋಜಿಸಿದ್ದ ತರುಣ ಸಮಾವೇಶ ಹಾಗೂ ಭಾರತ್ ಮಾತಾ ಪೂಜಾ ಉತ್ಸವದಲ್ಲಿ ಪ್ರಚೋದನಕಾರಿ ಭಾಷಣ ಪ್ರಕರಣ ಸಂಬಂಧ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ದೋಷಾರೋಪ ಪಟ್ಟಿ ಸಲ್ಲಿಸಲು ರಾಜ್ಯ ಗೃಹ ಇಲಾಖೆ ಕಾರ್ಯದರ್ಶಿ ಮತ್ತು ಅಧೀನ ಕಾರ್ಯದರ್ಶಿ 2017 ರ ಮಾರ್ಚ್ 10 ರಂದು ಪೂರ್ವನುಮತಿ ನೀಡಿದ್ದರು. ಈ ಅನುಮತಿಯೊಂದಿಗೆ ಮಾರ್ಚ್ 10 ರಂದು ಪೊಲೀಸರು ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಆರೋಪ ಸಂಬಂಧ ಬಂಟ್ವಾಳ ಪೊಲೀಸರು ಡಾ.ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ದೂರು ದಾಖಲಿಸಿದ್ದರು. ಬೆಳ್ತಂಗಡಿ ಸಿವಿಲ್ ಜೆಎಂಎಫ್ ನ್ಯಾಯಾಲಯ ವಿಚಾರಣೆಗೆ ಹಾಜರಾಗಲು ಸೂಚಿಸಿ ಜೂನ್ 12 ರಂದು ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಅವರಿಗೆ ಸಮನ್ಸ್ ಜಾರಿ ಮಾಡಿತ್ತು. ಇದನ್ನು ಪ್ರಶ್ನಿಸಿ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹೈಕೋರ್ಟ್ ಮೆಟ್ಟಿಲೇರಿದ್ದರು.